ಬೆಂಗಳೂರಿನಲ್ಲಿ ಸದ್ಯ ಲಾಕ್‍ಡೌನ್ ಹೇರದಿರಲು ನಿರ್ಧಾರ : ಸಿಎಂ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ - Karavali Times ಬೆಂಗಳೂರಿನಲ್ಲಿ ಸದ್ಯ ಲಾಕ್‍ಡೌನ್ ಹೇರದಿರಲು ನಿರ್ಧಾರ : ಸಿಎಂ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ - Karavali Times

728x90

25 June 2020

ಬೆಂಗಳೂರಿನಲ್ಲಿ ಸದ್ಯ ಲಾಕ್‍ಡೌನ್ ಹೇರದಿರಲು ನಿರ್ಧಾರ : ಸಿಎಂ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ
ಬೆಂಗಳೂರು (ಕರಾವಳಿ ಟೈಮ್ಸ್) : ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ತೀವ್ರಗೊಳ್ಳುತ್ತಿದ್ದರೂ ರಾಜಧಾನಿಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಲಾಕ್‍ಡೌನ್ ಮಾಡದಿರಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರು, ಅಧಿಕಾರಿಗಳನ್ನೊಳಗೊಂಡಂತೆ ಉನ್ನತಮಟ್ಟದ ಸಭೆ ನಡೆಸಿದ್ದು, ಸದ್ಯಕ್ಕೆ ಬೆಂಗಳೂರಿನಲ್ಲಿ ಲಾಕ್‍ಡೌನ್ ಮಾಡದೇ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ. ತಜ್ಞರು ಲಾಕ್‍ಡೌನ್ ಬೇಡ ಎಂದು ಸಲಹೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದಲ್ಲಿ ಸೋಂಕು ದೃಢಪಟ್ಟ ನಂತರ ಸೋಂಕಿತರನ್ನು ತ್ವರಿತವಾಗಿ ಆಸ್ಪತ್ರೆಗೆ ದಾಖಲಿಸಬೇಕು. ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್‍ಗಳನ್ನು ಈ ಉದ್ದೇಶಕ್ಕೆ ಬಳಸುವ, ನಗರ ವಾರ್ಡ್‍ಗಳಲ್ಲಿ ಇನ್ನಷ್ಟು ಬಿಗಿಬಂದೋಬಸ್ತ್‍ನಂತಹ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ರೋಗಿಗಳು ಕಾಯುವ ಪರಿಸ್ಥಿತಿ ಬರಬಾರದು. ಸೋಂಕಿತರನ್ನು ಕರೆದೊಯ್ಯಲು ಈಗ 100 ಅಂಬ್ಯುಲೆನ್ಸ್‍ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್‍ಗಳನ್ನು ಈ ಉದ್ದೇಶಕ್ಕೆ ಬಳಸಲು ತೀರ್ಮಾನಿಸಲಾಗಿದೆ. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ.

ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸಬೇಕು. ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್‍ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ. ಹಾಸಿಗೆಗಳ ಲಭ್ಯತೆ ಬಗ್ಗೆ ಸಮಗ್ರ ಮಾಹಿತಿ ಲಭ್ಯವಿರಲು ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃûಜಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಶೇ. 61ರಷ್ಟು ಸೊಂಕಿತರು ಗುಣಮುಖರಾಗಿದ್ದಾರೆ. 3700 ಸಕ್ರಿಯ ಪ್ರಕರಣಗಳಿವೆ.

ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಸುವಂತೆ ಯಡಿಯೂರಪ್ಪ ನಿರ್ದೇಶನ ನೀಡಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ತೀರ್ಮಾನಿಸಲು ಮುಖ್ಯಮಂತ್ರಿ ಉದ್ದೇಶಿಸಿದ್ದಾರೆ. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚನೆ ನೀಡಲಾಗಿದೆ.

ಸಭೆ ಬಳಿಕ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಬೆಂಗಳೂರಿನಲ್ಲಿ ಯಾವುದೇ ಲಾಕ್‍ಡೌನ್ ಇರುವುದಿಲ್ಲ. ಸೋಂಕು ಹೆಚ್ಚಿರುವ ವಾರ್ಡ್‍ಗಳಲ್ಲಿ ಸೀಲ್‍ಡೌನ್ ಮುಂದುವರಿಯಲಿದೆ. ಲಾಕ್‍ಡೌನ್ ಮಾಡುವಂತೆ ಶ್ರೀಮಂತ ವರ್ಗ ಬೇಡಿಕೆ ಇಟ್ಟಿದೆ. ಆದರೆ ಕೂಲಿ ಕಾರ್ಮಿಕರ ಬೇಡ ಎಂದಿದ್ದಾರೆ. ಸರಕಾರ ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡಬೇಕಾಗುತ್ತದೆ. ಶೇ 85ರಷ್ಟು ಜನ ಲಾಕ್‍ಡೌನ್ ಬೇಡ ಎಂದಿದ್ದಾರೆ. ಹೀಗಾಗಿ ಬಡವರ ಪರ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ನಗರದಲ್ಲಿ 100 ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಬೆಡ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದ್ದು, ತುಷಾರ್ ಗಿರಿನಾಥ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ ಎಂದರು.

ಕೊರೊನಾ ಯುದ್ಧದಂತೆ. ಈ ಯುದ್ಧದ ಸಮಯದಲ್ಲಿ ರಾಜಕೀಯ ಬೇಡ. ಕಾಂಗ್ರೆಸ್ ನಾಯಕರು ರಾಜಕೀಯ ಬಿಟ್ಟು ಸಲಹೆ ನೀಡಲಿ. ಪರಿಸ್ಥಿತಿ ಕೈಮೀರುವ ಸ್ಥಿತಿಯಿಲ್ಲ. ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಕ್ವಾರಂಟೈನ್ ಕಡ್ಡಾಯ. ಚೆನ್ನೈ, ದೆಹಲಿಯಿಂದ ಬಂದರೆ ಕ್ವಾರಂಟೈನ್ ಅವಶ್ಯಕತೆ ಇಲ್ಲ ಎಂದು ಆರ್. ಅಶೋಕ್ ಹೇಳಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್ ಹಾಗೂ ಗೋವಿಂದ ಕಾರಜೋಳ, ಸಚಿವರಾದ ವಿ. ಸೋಮಣ್ಣ, ಬಿ. ಶ್ರೀರಾಮುಲು, ಭೈರತಿ ಬಸವರಾಜ, ಸಂಸದ ತೇಜಸ್ವಿ ಸೂರ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a comment

Item Reviewed: ಬೆಂಗಳೂರಿನಲ್ಲಿ ಸದ್ಯ ಲಾಕ್‍ಡೌನ್ ಹೇರದಿರಲು ನಿರ್ಧಾರ : ಸಿಎಂ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ Rating: 5 Reviewed By: karavali Times
Scroll to Top