ಬೆಂಗಳೂರು, ಮೇ 17, 2022 (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 18ರಂದು ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಿದೆ.
ಮೇ 17 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಜೊತೆಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ನಿಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ.
3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಲರ್ಟ್ ಘೋಷಿಸಿದ ದಿನಗಳಲ್ಲಿ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ಸೋಮವಾರ ನೈರುತ್ಯ ಮುಂಗಾರು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ್ದು, ನಿಗದಿತ ಸಮಯಕ್ಕಿಂತಲೂ 6 ದಿನ ಮುಂಚಿತವಾಗಿ ಪ್ರಾರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಸೋಮವಾರದಿಂದ ಬುಧವಾರದವರೆಗೆ ತಮಿಳುನಾಡಿನಲ್ಲಿ ಹಾಗೂ ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
0 comments:
Post a Comment