ಮಂಗಳೂರು, ಮೇ 31, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆ ಅನಾಹುತಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ, ಮಂಗಳೂರು ಸಮೀಪದ ಮೊಂಟೆಪದವು ಕೋಡಿಯಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದಿದ್ದು ವೃದ್ಧೆ ಪ್ರೇಮಾ ಪೂಜಾರಿ, ಮೊಮ್ಮಕ್ಕಳಾದ ಆರ್ಯನ್ ಮತ್ತು ಆರುಷ್ ಮೃತಪಟ್ಟಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಹೊರ ವಲಯದ ದೇರಳಕಟ್ಟೆಯಲ್ಲಿ ಮನೆಯ ಮೇಲೆ ಕಾಂಪೌಂಡ್ ಗೋಡೆ ಕುಸಿದು ಆರು ವರ್ಷದ ಬಾಲಕಿ ಫಾತಿಮಾ ಸಾವನ್ನಪ್ಪಿದ್ದಾಳೆ. ಈ ಮಧ್ಯೆ, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರು ಸಮುದ್ರಕ್ಕೆ ಇಳಿದಿದ್ದ ತೋಟಬೆಂಗ್ರೆ ನಿವಾಸಿಗಳಾದ ಯಶವಂತ್, ಕಮಲಾಕ್ಷ ಸಮುದ್ರಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ತಕ್ಷಣ ಪರಿಹಾರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಕಳೆದ 125 ವರ್ಷಗಳಲ್ಲಿ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 28 ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‍ಗಳ ಸಿಇಒಗಳೊಂದಿಗೆ ನಡೆದ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ಸಂತ್ರಸ್ತರಿಗೆ ಅಗತ್ಯ ಪರಿಹಾರವನ್ನು ನೀಡುವಂತೆ ಕೇಳಿಕೊಂಡಿದ್ದಾರೆ.
ಮಳೆ ಹಾನಿಗೆ ಪರಿಹಾರ ನೀಡಲು ಯಾವುದೇ ಹಣದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ಎಸ್‍ಡಿಆರ್‍ಎಫ್ ಅಡಿಯಲ್ಲಿ 1,000 ಕೋಟಿ ರೂಪಾಯಿಗಳಿಗೂ ಹೆಚ್ಚು ಲಭ್ಯವಿದೆ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು. ಭಾರೀ ಮಳೆಯಿಂದ ಮನೆಗಳಿಗೆ ಹಾನಿಯಾದರೆ ಪರಿಹಾರ ನೀಡಲು ಈಗಾಗಲೇ ಮಾರ್ಗಸೂಚಿಗಳನ್ನು ನೀಡಲಾಗಿದೆ. ತಕ್ಷಣ ಪರಿಹಾರ ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಇದೇ ವೇಳೆ, ಕರ್ನಾಟಕದಾದ್ಯಂತ ಪ್ರಮುಖ ಅಭಿವೃದ್ಧಿ ಕಾರ್ಯಗಳ ಮೇಲ್ವಿಚಾರಣೆಗಾಗಿ ರಿಯಲ್-ಟೈಮ್, ಸಂಯೋಜಿತ ಒಳನೋಟ ಒದಗಿಸುವ ವೇದಿಕೆಯಾದ ‘ಸಿಎಂ ಡ್ಯಾಶ್‍ಬೋರ್ಡ್’ಗೆ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
0 comments:
Post a Comment