ಮಂಗಳೂರು, ಜೂನ್ 13, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರಾಜ್ಯದ ಗೃಹಮಂತ್ರಿ ಡಾ ಜಿ ಪರಮೇಶ್ವರ ಅವರು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸಿ, ಕಾನೂನು ಕ್ರಮ ಕೈಗೊಳ್ಳಬೇಕು, ವಾಹನ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿವೆ. ಇದನ್ನು ತಡೆಗಟ್ಟಲು ಅಗತ್ಯ ಕಾರ್ಯಾಚರಣೆ ಮತ್ತು ಜಾಗೃತಿ ಮೂಡಿಸಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳು ಕಾನೂನಿಂದ ತಪ್ಪಿಸಿಕೊಳ್ಳಬಾರದು. ನ್ಯಾಯಾಲಯದ ವಿಚಾರಣೆ ವೇಳೆ ಅಗತ್ಯ ಸಾಕ್ಷ್ಯಾಧಾರಗಳನ್ನು ಒದಗಿಸಿ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ನೊಂದವರು ಠಾಣೆಗೆ ಬಂದಾಗ ಅವರ ದೂರನ್ನು ಆಲಿಸಿ, ರಕ್ಷಣೆ ನೀಡಬೇಕು ಎಂದು ಗೃಹ ಸಚಿವರು ಪೊಲೀಸರಿಗೆ ಸೂಚಿಸಿದ್ದಾರೆ.
ಈ ಸಂದರ್ಭ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಡಿಸಿಪಿ ಸಿದ್ಧಾರ್ಥ್ ಗೋಯಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ., ಚಿಕ್ಕಮಗಳೂರು ಜಿಲ್ಲಾ ಎಸ್ಪಿ ವಿಕ್ರಮ್ ಆಮ್ಟೆ, ಉತ್ತರ ಕನ್ನಡ ಜಿಲ್ಲಾ ಎಸ್ಪಿ ನಾರಾಯಣ, ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.



















0 comments:
Post a Comment