ತಲೆಮರೆಸಿಕೊಂಡಿದ್ದ 24 ಪ್ರಕರಣಗಳ ಕುಖ್ಯಾತ ಆರೋಪಿ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ - Karavali Times ತಲೆಮರೆಸಿಕೊಂಡಿದ್ದ 24 ಪ್ರಕರಣಗಳ ಕುಖ್ಯಾತ ಆರೋಪಿ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ - Karavali Times

728x90

22 July 2025

ತಲೆಮರೆಸಿಕೊಂಡಿದ್ದ 24 ಪ್ರಕರಣಗಳ ಕುಖ್ಯಾತ ಆರೋಪಿ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ

ಮಂಗಳೂರು, ಜುಲೈ 22, 2025 (ಕರಾವಳಿ ಟೈಮ್ಸ್) : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಆರೋಪಿಯನ್ನು ಮಂಜನಾಡಿ ಸಮೀಪದ ಕಲ್ಕಟ್ಟ, ಬದ್ರಿಯಾ ನಗರ-ಬಟ್ಯಡ್ಕ ನಿವಾಸಿ ಕೆ ಎಂ ಅಬ್ಬಾಸ್ ಎಂಬವರ ಪುತ್ರ ಮೊಹಮ್ಮದ್ ಅಬ್ದುಲ್ ಫಯಾನ್ (27) ಎಂದು ಹೆಸರಿಸಲಾಗಿದೆ. ಈತ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಬಿಡುಗಡೆಗೊಂಡ ಬಳಿಕ ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯಾಗಿದ್ದಾನೆ. 

ಈತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಖೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಜಾರಿಯಾಗಿರುತ್ತದೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕೂಡಾ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಬಂಧಿತ ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ತಲೆಮರೆಸಿಕೊಂಡಿದ್ದ 24 ಪ್ರಕರಣಗಳ ಕುಖ್ಯಾತ ಆರೋಪಿ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top