ಬಂಟ್ವಾಳ, ಜುಲೈ 20, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ತನಿಖಾ ಪಿಎಸ್ಸೈ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ವೈಯುಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಮೃತ ಪೊಲೀಸ್ ಅಧಿಕಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳೆದ 4 ತಿಂಗಳಿನಿಂದ ತನಿಖಾ ಪಿಎಸ್ಸೈ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಉತ್ತರ ಕನ್ನಡ ರಾಜ್ಯದ ಕಾರವಾರ ಮೂಲದ ನಿವಾಸಿ ಖೀರಪ್ಪ (55) ಎಂದು ಹೆಸರಿಸಲಾಗಿದೆ.
ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇವರ ಕುಟುಂಬ ಉತ್ತರ ಕನ್ನಡದಲ್ಲೇ ವಾಸ್ತವ್ಯ ಇದ್ದು, ಇವರೊಬ್ಬರೇ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಭಾನುವಾರ ಬೆಳಿಗ್ಗೆ ಇವರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಬಳಿಕ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರು ಶನಿವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿ ಬಳಿಕ ಮನೆಗೆ ತೆರಳಿದ್ದರು. ಭಾನುವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಬಂದಿರಲಿಲ್ಲ. ಮೊಬೈಲ್ ಕರೆ ಮಾಡಿದರೂ ಸ್ವೀಕರಿಸದೆ ಇದ್ದ ಹಿನ್ನಲೆಯಲ್ಲಿ ಸಂಶಯಗೊಂಡ ಠಾಣಾ ಪೊಲೀಸರು ಪಿಎಸ್ಸೈ ವಾಸವಾಗಿರುವ ಬಾಡಿಗೆ ಮನೆಗೆ ಹೋಗಿ ನೋಡಿದಾಗ ಮನೆಗೆ ಬೀಗ ಹಾಕಲಾಗಿತ್ತು. ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ಇವರು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment