ಮಂಗಳೂರು, ಜುಲೈ 06, 2025 (ಕರಾವಳಿ ಟೈಮ್ಸ್) : ವಿದೇಶದಲ್ಲಿ ಉದ್ಯೋಗ ಕೊಡಿಸುವ ವೀಸಾ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ವಂಚಿಸಿ ಕೋಟ್ಯಂತರ ರೂಪಾಯಿ ಮುಂಡಾಮೋಚಿದ ಮುಂಬೈ ಮೂಲದ ಇಬ್ಬರು ಖದೀಮರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಮುಂಬೈ ಮೂಲದ ಅಬ್ದುಲ್ ಸತ್ತಾರ್ ಎಂಬವರ ಪುತ್ರ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಹಾಗೂ ಚಂದ್ರಸೇನ ಎಂಬವರ ಪುತ್ರ ಸಾಹುಕಾರಿ ಕಿಶೋರ್ ಕುಮಾರ್ ಅಲಿಯಾಸ್ ಅನಿಲ್ ಪಾಟೀಲ್ (34) ಎಂದು ಹೆಸರಿಸಲಾಗಿದೆ.
ಆರೋಪಿಗಳು ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುದಾಗಿ ನಂಬಿಸಿ ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ ಹೈರ್ ಗ್ಲೋ ಎಲಿಗ್ಯಾಂಟ್ ಓವರ್ ಸೀಸ್ ಇಂಟರ್ ನ್ಯಾಷನಲ್ (ಒಪಿಸಿ) ಪ್ರೈವೇಟ್ ಲಿಮಿಟೆಡ್ ಎಂಬ ಕಚೇರಿಯನ್ನು ತೆರೆದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ರೀತಿಯಲ್ಲಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಪೀಕಿಸಿ ವೀಸಾ ನೀಡದೆ ಸುಮಾರು 289 ಮಂದಿಗೆ ಸುಮಾರು 4.50 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಜಾಡು ಹಿಡಿದು ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧಿಸಿದ್ದು, ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ತನಿಖೆ ಮುಂದುವರಿಸಿದ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
0 comments:
Post a Comment