ಪುತ್ತೂರು, ಆಗಸ್ಟ್ 25, 2025 (ಕರಾವಳಿ ಟೈಮ್ಸ್) : ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣ ಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ/ ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲ ಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣ ಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣಾ ಮತ್ತು ನಿಯಂತ್ರಣಾ) ಕಾಯ್ದೆಯನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 1860ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಗೌರಿ ಗಣೇಶ ಹಬ್ಬದ ಸಂದರ್ಭಗಳಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿ ಗಣೇಶ ಮೂರ್ತಿಗಳನ್ನು ಪುತ್ತೂರು ನಗರಸಭೆಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನ್ನು ವಿಸರ್ಜಿಸಬೇಕು.
ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪುತ್ತೂರು ನಗರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುತ್ತದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













0 comments:
Post a Comment