ಮಂಗಳೂರು, ಸೆಪ್ಟೆಂಬರ್ 23, 2025 (ಕರಾವಳಿ ಟೈಮ್ಸ್) : ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಫಿಶ್ ಕಟ್ಟಿಂಗ್ ಯೂನಿಟ್ ಸಂಸ್ಥೆಗೆ ದಾಳಿ ನಡೆಸಿ, 10 ಬಾಲಕಾರ್ಮಿಕ/ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿದೆ.
ಸಾರ್ವಜನಿಕರ ದೂರಿನ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ಮಕ್ಕಳು ಬಿಹಾರ ಮತ್ತು ನೇಪಾಳ ಮೂಲದವರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ, ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ, ಯೋಜನಾ ನಿರ್ದೇಶಕ ಶ್ರೀನಿವಾಸ ನಾಯಕ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ಪಣಂಬೂರು ಪೊಲೀಸ್ ಠಾಣೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ, ಕಾವೂರು ಶಾಂತಿನಗರದ ಬಾಲಕಿಯರ ಬಾಲಮಂದಿರದಲ್ಲಿ ಪುನರ್ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಠ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುತ್ತಿರುವುದನ್ನು ನಿಯಂತ್ರಿಸಲಾಗಿರುತ್ತದೆ.
ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ 50 ಸಾವಿರದವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೆÇಲೀಸ್ ಇಲಾಖೆಯಿಂದ ಎಫ್.ಐ.ಆರ್ ಕೂಡಾ ದಾಖಲಿಸಲಾಗುತ್ತದೆ.
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್‍ಲೈನ್ 1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆಗಳಾದ 0824-2435343, 2433132, 2437479 ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ 2433131 ಗೆ ಕರೆ ಮಾಡಿ ತಿಳಿಸಬಹುದು.
0 comments:
Post a Comment