ಮಂಗಳೂರು, ಸೆಪ್ಟೆಂಬರ್ 15, 2025 (ಕರಾವಳಿ ಟೈಮ್ಸ್) : ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ ಈ ದೇಶದ ಪ್ರಜಾಪ್ರಭುತ್ವವನ್ನು ಗೌರವಿಸಿ, ಅದರಂತೆ ನಡೆಯುವುದು ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ಪ್ರಜೆಯ ಘನತೆ ಗೌರವವನ್ನು ಸಂವಿಧಾನವು ಎತ್ತಿ ಹಿಡಿದಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಪ್ರತಿಯೊಂದು ಕರ್ತವ್ಯಗಳನ್ನು ಪಾಲಿಸಿಕೊಂಡು ದೇಶದ ಏಳಿಗೆಗೆ ಸಹಕರಿಸಬೇಕು ಎಂದರು.
ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸಂವಿಧಾನ ಪೀಠಿಕೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಸಮಾಜ ಕಲ್ಯಾಣ ಇಲಾಖಾ ಉಪನಿರ್ದೇಶಕಿ ಹೇಮಲತಾ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದ ವಸತಿ ಶಾಲೆಗಳಲ್ಲಿ ಮೊದಲ ಸ್ಥಾನ ಪಡೆದ ಕೆಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲ ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನವೆಂಬರ್ 26 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ನಡೆಯುವ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿಯಿಂದ ಪುರಭವನದವರೆಗೆ ನಡೆದ ಸೈಕಲ್ ರ್ಯಾಲಿಗೆ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿದರು.















0 comments:
Post a Comment