ಬೆಂಗಳೂರು, ಅಕ್ಟೋಬರ್ 22, 2025 (ಕರಾವಳಿ ಟೈಮ್ಸ್) : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿರುವುದರಿಂದ ಅಕ್ಟೋಬರ್ 29ರವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲೂ ವರುಣಾರ್ಭಟ ಮುಂದುವರಿಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಅಕ್ಟೋಬರ್ 23ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಂತಹ ಗುಡುಗು ಪ್ರದೇಶಗಳ ಜಿಲ್ಲೆಗಳಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
























0 comments:
Post a Comment