ಸರಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು : ಭರತ್ ಮುಂಡೋಡಿ - Karavali Times ಸರಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು : ಭರತ್ ಮುಂಡೋಡಿ - Karavali Times

728x90

24 November 2025

ಸರಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು : ಭರತ್ ಮುಂಡೋಡಿ

ಮಂಗಳೂರು, ನವೆಂಬರ್ 24, 2025 (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನ 24 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹರಲ್ಲದ ಫಲಾನುಭವಿಗಳು ಬಿಪಿಎಲ್ ಕಾರ್ಡ್ ಪಡೆದು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ  ಅಕ್ಕಿ ಪಡೆಯುತ್ತಿದ್ದಾರೆ.  ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಅರ್ಹರಲ್ಲದ ಹಾಗೂ ಆದಾಯ ಮೀರಿದವರ ಕಾರ್ಡುಗಳನ್ನು ರದ್ದುಗೊಳಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಅನರ್ಹ ಫಲಾನುಭವಿಗಳು ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿರುವುದರಿಂದ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಅವಿಭಕ್ತ ಕುಟುಂಬಗಳ ಮನೆಗಳಿಗೆ ನೇರವಾಗಿ ಭೇಟಿ ನೀಡಿ ಸರ್ವೆ ನಡೆಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದವರು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ ಹೊಸದಾಗಿ 92 ಫಲಾನುಭವಿಗಳು ನೋಂದಾಯಿಸಿಕೊಂಡಿರುತ್ತಾರೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಶಕ್ತಿ ಯೋಜನೆಯಡಿ ಹೆಚ್ಚುವರಿಯಾಗಿ ವಾಹನ, ಚಾಲಕರು ಮತ್ತು ಸಿಬ್ಬಂದಿಗಳನ್ನು ನೀಡಿದರೂ ಕೂಡ ಬಸ್ಸುಗಳನ್ನು ನಿಲುಗಡೆ ಮಾಡಲು ಡಿಪೆÇ ಅನಿವಾರ್ಯತೆ ಇರುತ್ತದೆ. ಮಂಗಳೂರು ತಾಲೂಕಿನಲ್ಲಿ 5 ಘಟಕಗಳಿದ್ದು ಪ್ರತಿ ಘಟಕದಿಂದ 130 ಅನುಸೂಚಿಗಳನ್ನು ಕಾರ್ಯಾಚರಿಸಲಾಗುತ್ತಿದೆ. ಮುಡುಪಿನಲ್ಲಿ ಘಟಕ ಪ್ರಾರಂಭಿಸುವ ಬಗ್ಗೆ ಈಗಾಗಲೇ ಸರ್ಕಾರಕ್ಕೆ, ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಮಂಗಳೂರು ವಿಭಾಗದ ಕೆ.ಎಸ್.ಆರ್.ಟಿ.ಸಿ.  ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಸಭೆಗೆ ಮಾಹಿತಿ ನೀಡಿದರು. ಮಂಗಳೂರು ಮತ್ತು ಪುತ್ತೂರು ವಿಭಾಗ ಸೇರಿ ಚಾಲನಾ ಸಿಬ್ಬಂದಿಗಳ ನೇಮಕಾತಿಯಾಗಿದ್ದು, ಗೈರು ಹಾಜರಾದ ಸಿಬ್ಬಂದಿಗಳಿಗೆ ನೋಟೀಸ್ ಜಾರಿ ಮಾಡಿ ಅವರನ್ನು ಕರ್ತವ್ಯದಿಂದ ತೆಗೆಯುವ ಪ್ರಕ್ರಿಯೆ ಜಾರಿಯಲ್ಲಿದ್ದು, ಶೀಘ್ರವಾಗಿ ಕ್ರಮ ವಹಿಸುವಂತೆ ಅಧ್ಯಕ್ಷರು ಸೂಚಿಸಿದರು.

ಮೆಸ್ಕಾಂನ ಪ್ರತೀ ಉಪವಿಭಾಗ ವ್ಯಾಪ್ತಿಯ 24*7 ಸೇವಾ ಕೇಂದ್ರಗಳಲ್ಲಿ ವಾಹನದ ವ್ಯವಸ್ಥೆಯನ್ನು ಈಗಾಗಲೇ ಕಲ್ಪಿಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬಳಸಲು ಸೂಚಿಸಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 6,776 ಮಂದಿ ನೋಂದಣಿ ಮಾಡಿಕೊಂಡಿದ್ದು, 5,828 ಅಭ್ಯರ್ಥಿಗಳಿಗೆ ಡಿಬಿಟಿ ಪಾವತಿ ಆಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ,  ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಮಾ ಕೆ.ಎಸ್., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ,  ಜಯಂತಿ ಬಿ ಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಬಿ ಪದ್ಮನಾಭ ಸಾಲ್ಯಾನ್, ಸುರೇಂದ್ರ ಕಂಬಳಿ, ಎಸ್ ರಫೀಕ್, ಆಲಿಸ್ಟನ್ ಕ್ಲೈವ್ ಡಿಕುನ್ಹ ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸರಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಸಮಗ್ರವಾಗಿ ಕಾರ್ಯನಿರ್ವಹಿಸಬೇಕು : ಭರತ್ ಮುಂಡೋಡಿ Rating: 5 Reviewed By: karavali Times
Scroll to Top