ಮಂಗಳೂರು, ಜನವರಿ 21, 2026 (ಕರಾವಳಿ ಟೈಮ್ಸ್) : ಶಾಲಾ ಕಾಲೇಜುಗಳ ಆಸುಪಾಸಿನಲ್ಲಿ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ತಿಳಿಸಿದ್ದಾರೆ.
ಪುರಭವನದಲ್ಲಿ ಜನವರಿ 20 ರಂದು ನಡೆದ ನಾರ್ಕೋ ಕೋ-ಆರ್ಡಿನೇಶನ್ ಸೆಂಟರಿನ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಆಗ್ಗಿಂದಾಗೆ ನಡೆಸಬೇಕು. ಕೆಲವೆಡೆ ವಿದ್ಯಾರ್ಥಿಗಳು ಪರೀಕ್ಷೆ ಒತ್ತಡದಿಂದಾಗಿ ಮಾದಕ ವಸ್ತುಗಳನ್ನು ಸೇವಿಸುವ ಬಗ್ಗೆ ವರದಿ ಬಂದಿದೆ. ಈ ನಿಟ್ಟಿನಲ್ಲಿ ಶಾಲೆ, ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದರು.
ಪದವಿಪೂರ್ವ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸಲು ನಿರ್ಲಕ್ಷ್ಯ ವಹಿಸಿದ ಬಗ್ಗೆ ಅವರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಡ್ರಗ್ಸ್ ಪರೀಕ್ಷೆಯನ್ನು ಹೆಚ್ಚಿಸಲು ಆರೋಗ್ಯ ಇಲಾಖೆಗೆ ಹೆಚ್ಚಿನ ಕಿಟ್‍ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಮಾತನಾಡಿ, ವಿವಿಧ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಸಾರ್ವಜನಿಕರಲ್ಲಿ ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಆಗ್ಗಿಂದಾಗೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರು ನಗರದಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ 62 ಡ್ರಗ್ಸ್ ಸೇವಿಸಿದವರನ್ನು ಹಾಗೂ 21 ಪೆಡ್ಲರುಗಳನ್ನು ಬಂಧಿಸಲಾಗಿದೆ ಎಂದು ಪೆÇಲೀಸ್ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹೋಂ ಸ್ಟೇ ಮತ್ತು ಲಾಡ್ಜ್ ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸಬೇಕು. ಕರಾವಳಿ ಭದ್ರತಾ ಪೆÇಲೀಸರು ಬೋಟ್ ಗಳನ್ನು ಅನಿರೀಕ್ಷಿತ ತಪಾಸಣೆ ನಡೆಸಬೇಕು. ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ಪಾರ್ಸೆಲ್‍ಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಕೈಗಾರಿಕಾ ಘಟಕಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಬೇಕು. ರೈಲ್ವೆ ಮತ್ತು ವಿಮಾನ ನಿಲ್ದಾಣಗಳಲ್ಲಿ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮೆಡಿಕಲ್ ಗಳಲ್ಲಿ ಔಷಧದ ಮಾರಾಟದ ಬಗ್ಗೆ ಸೂಕ್ತ ದಾಖಲೆಯನ್ನು ನಿರ್ವಹಿಸದ 4 ಮೆಡಿಕಲ್‍ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಔಷದ ನಿಯಂತ್ರಣ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಮಾಡಲು ನಿರಂತರ ಕಾರ್ಯಾಚರಣೆ ಮತ್ತು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಉಪ ಪೆÇಲೀಸ್ ಆಯುಕ್ತ ಮಿಥುನ್ ಎಚ್.ಎನ್, ಎಎಸ್ಪಿ ಅನಿಲ್ ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮೊದಲಾದವರು ಭಾಗವಹಿಸಿದ್ದರು.












0 comments:
Post a Comment