ಮಂಗಳೂರು, ಮಾರ್ಚ್ 11, 2026 (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸುತ್ತಿದ್ದು, ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಾರ್ಚ್ 12 ಹಾಗೂ 13 ರಂದು ಬಿಸಿಲು ಮತ್ತು ಉಷ್ಣತೆ ಮತ್ತಷ್ಟು ಹೆಚ್ಚಾಗಲಿದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಮಾರ್ಚ್ 11 ರಂದು ಬೆಳಗ್ಗೆ 8.30ಕ್ಕೆ ಕೊನೆಗೊಳ್ಳುವ 24 ಗಂಟೆಗಳ ಅವಧಿಗೆ ಐಎಂಡಿ ಬಿಡುಗಡೆ ಮಾಡಿದ ದತ್ತಾಂಶವು ಕರ್ನಾಟಕದ ಹಲವು ಭಾಗಗಳಲ್ಲಿ 33 ಡಿಗ್ರಿ ಸೆಲ್ಸಿಯಸ್ ಮತ್ತು 37 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತೋರಿಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ಅಂದರೆ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಉಡುಪಿಯಲ್ಲಿ 35.8 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಿದೆ. ತುಲನಾತ್ಮಕವಾಗಿ ಹೆಚ್ಚಿನ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಗಿದೆ. ಉತ್ತರ ಕನ್ನಡದಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕರ್ನಾಟಕದ ಹಲವಾರು ಒಳನಾಡಿನ ಜಿಲ್ಲೆಗಳು ಸಹ ಈ ಅವಧಿಯಲ್ಲಿ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ, ಹಾವೇರಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೀದರಿನಲ್ಲಿ 36.3 ಡಿಗ್ರಿ ಮತ್ತು ರಾಯಚೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾಗಲಕೋಟೆ (35.9 ಡಿಗ್ರಿ), ಬೆಳಗಾವಿ (35.4 ಡಿಗ್ರಿ), ಶಿವಮೊಗ್ಗ (35.3 ಡಿಗ್ರಿ) ಮತ್ತು ಬಳ್ಳಾರಿ (35 ಡಿಗ್ರಿ) ಜಿಲ್ಲೆಗಳಲ್ಲಿಯೂ ಹಗಲಿನ ತಾಪಮಾನ ಹೆಚ್ಚಾಗಿದೆ. ಇದು ರಾಜ್ಯದ ಹಲವಾರು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಬಿಸಿಲಿನ ಬೇಗೆ ಕ್ರಮೇಣ ಏರಿಕೆಯಾಗುವುದನ್ನು ಸೂಚಿಸುತ್ತದೆ ಎನ್ನಲಾಗುತ್ತಿದೆ.
















0 comments:
Post a Comment