ಮಂಗಳೂರು, ಮಾರ್ಚ್ 19, ಮಾರ್ಚ್, 2026 (ಕರಾವಳಿ ಟೈಮ್ಸ್) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯು ಬುಧವಾರ ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭ ಅವರು ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧ ಯೋಜನಾ ಸಮಿತಿ, ಟ್ರಾನ್ಸ್ ಜೆಂಡರ್ ತಾಲೂಕು ಮಟ್ಟದ ಸಮನ್ವಯ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ ಸಮಿತಿ, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟ ತಡೆ ಸಮಿತಿ, ಬಾಲ್ಯವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿಯನ್ನು ಪರಿಶೀಲಿಸಿದರು.
ಮಹಿಳೆಯರ ಮತ್ತು ಮಕ್ಕಳ ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ಇಂತಹ ಜಾಲವನ್ನು ಪತ್ತೆಹಚ್ಚಿ ಮಕ್ಕಳನ್ನು ಮತ್ತು ಮಹಿಳೆಯರನ್ನು ರಕ್ಷಿಸಬೇಕು. ಮಾದಕ ವಸ್ತು ಸೇವನೆ ತಡೆಯಲು ಜನರಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಕೌಟುಂಬಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮಕೈಗೊಳ್ಳಬೇಕು ಎಂದವರು ಸೂಚಿಸಿದರು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯಡಿ ಎಪ್ರಿಲ್ 2025 ರಿಂದ ಫೆಬ್ರವರಿ 2026ರವರೆಗೆ 29 ಪ್ರಕರಣಗಳು ದಾಖಲಾಗಿರುತ್ತದೆ. ಮಂಗಳೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ತಾಯಂದಿರ ಸಭೆ ಹಾಗೂ ಸ್ತ್ರೀ ಶಕ್ತಿ ಸಭೆಗಳಲ್ಲಿ ಸೇರಿದ ಮಹಿಳೆಯರು ಹಾಗೂ ಸೇರಿದ ಜನರಿಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧದ ಬಗ್ಗೆ ತಿಳಿಸಲಾಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.












0 comments:
Post a Comment