ಮಂಗಳೂರು, ಎಪ್ರಿಲ್ 10, 2026 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿರುವ ಇ.ಎಸ್.ಐ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳಲ್ಲಿ ರೋಗಿಗಳಿಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯ ದೊರಕುವಂತೆ ಸುಸಜ್ಜಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಪ್ರಿಲ್ 10 ರಂದು ಇ.ಎಸ್.ಐ. ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರು ಇ.ಎಸ್.ಐ ಚಿಕಿತ್ಸೆಯನ್ನು ಅವಲಂಭಿಸಿರುತ್ತಾರೆ. ಈ ನಿಟ್ಟಿನಲ್ಲಿ ಅವರ ಆರೋಗ್ಯ ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರಕಿಸಲು ಕ್ರಮವಹಿಸಬೇಕು ಎಂದರು.
ಇ.ಎಸ್.ಐ ಆಸ್ಪತ್ರೆಗಳೊಂದಿಗೆ ತಾಲೂಕು ಮತ್ತು ಜಿಲ್ಲಾ ಸರಕಾರಿ ಆಸ್ಪತ್ರೆಗಳನ್ನು ಪರಸ್ಪರ ಜೋಡಿಸಿ ಚಿಕಿತ್ಸೆ ಒದಗಿಸುವ ಸಂಬಂಧ ಆರೋಗ್ಯ ಇಲಾಖೆ ಹಾಗೂ ಇ.ಎಸ್.ಐ ಇಲಾಖೆ ನಡುವೆ ಒಪ್ಪಂದ ಪ್ರಕ್ರಿಯೆ ನಡೆಯುತ್ತಿದೆ. ಇದರಿಂದ ಇ.ಎಸ್.ಐ.ಗೆ ಒಳಪಟ್ಟ ರೋಗಿಗಳು ತಾಲೂಕು ಮತ್ತು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದ ಸಚಿವರು, ಮಂಗಳೂರು ಇ.ಎಸ್.ಐ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆ, ಪರೀಕ್ಷೆ ಮತ್ತು ಶಸ್ತ್ರ ಚಿಕಿತ್ಸೆ ದೊರಕುವಂತೆ ಮೇಲ್ದರ್ಜೆಗೇರಿಸಬೇಕು. ಈ ಬಗ್ಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಬೇಕು ಎಂದವರು ಸೂಚಿಸಿದರು.
ಇ.ಎಸ್.ಐ ಆಯುಕ್ತ ಡಾ. ದಿನೇಶ್ ಮಾತನಾಡಿ, ಇ.ಎಸ್.ಐ ಮಂಗಳೂರು ಪ್ರಾದೇಶಿಕ ವಲಯದ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 1 ಆಸ್ಪತ್ರೆ ಹಾಗೂ 11 ಚಿಕಿತ್ಸಾಲಯಗಳು ಕಾರ್ಯನಿರ್ವಹಿಸುತ್ತಿದೆ. ಸುಮಾರು 3.92 ಲಕ್ಷ ಇ.ಎಸ್.ಐ ನೋಂದಣಿಗಾರರು ಮತ್ತು ಅವರ 15 ಲಕ್ಷದಷ್ಟು ಕುಟುಂಬಸ್ಥರು ಇ.ಎಸ್.ಐ ಸೌಲಭ್ಯ ಪಡೆಯುತ್ತಿದ್ದಾರೆ. ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18 ಹಾಗೂ ಉಡುಪಿಯಲ್ಲಿ 11 ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಮಂಗಳೂರು ಇ.ಎಸ್.ಐ ಆಸ್ಪತ್ರೆಯನ್ನು 10 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನೀಕರಣ ಮಾಡಲಾಗುತ್ತಿದ್ದು, ಹೊಸದಾಗಿ ಐ.ಸಿ.ಯು, ಶಸ್ತ್ರಚಿಕಿತ್ಸೆ ಕೊಠಡಿ, ಪ್ರಯೋಗಾಲಯ, ಡಯಾಲಿಸಿಸ್ ಕೇಂದ್ರ ಸೇರಿದಂತೆ ಉನ್ನತ ಸೌಲಭ್ಯಗಳನ್ನು ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ, ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಇ.ಎಸ್.ಐ ನೋಡಲ್ ಅಧಿಕಾರಿ ಹೇಮಂತ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ಕುಡಿಯುವ ನೀರು ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ
ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಶೀಘ್ರವಾಗಿ ನೀರು ಪೂರೈಕೆಗೆ ಒತ್ತು ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಿಲ್ಲೆಯಲ್ಲಿ ಬೇಸಿಗೆಯಿಂದ ತಲೆದೋರಬಹುದಾದ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ 5 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. ಈ ಕಾಮಗಾರಿ ಪೂರ್ಣಗೊಂಡರೆ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಗೊಳ್ಳಲಿದೆ. ಕೆಲವೆಡೆ ಅರಣ್ಯ ಭೂಮಿ ಸಮಸ್ಯೆ ಕಂಡುಬಂದಿದ್ದು, ಅರಣ್ಯ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕೆಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಮಾತನಾಡಿ, ಬೆಳ್ತಂಗಡಿ ತಾಲೂಕಿನ ಇಳಂತಿಲ, ಕಡಬ ತಾಲೂಕಿನ ಅಲಂಕಾರು, ಮತ್ತು ಕುಟ್ರುಪ್ಪಾಡಿ, ಬಂಟ್ವಾಳ ತಾಲೂಕಿನ ಅಳಿಕೆ, ಉಳ್ಳಾಲ ತಾಲೂಕಿನ ಕೈರಂಗಳದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ತ್ವರಿತಗೊಳಿಸಲು ಸೂಚಿಸಲಾಗಿದ್ದು, ಮುಂದಿನ 6-7 ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದ ಅವರು, ಮರವೂರು ಅಣೆಕಟ್ಟಿನ ಗೇಟ್ ಗಳನ್ನು ಬದಲಾಯಿಸಲು 1 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ನಗರಕ್ಕೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲಿ ಪ್ರಸ್ತುತ 5.5 ಮೀಟರ್ ನೀರು ಲಭ್ಯವಿದೆ. ನಗರದಲ್ಲಿ ನೀರು ಸರಬರಾಜು ಉತ್ತಮ ಸ್ಥಿತಿಯಲ್ಲಿದೆ. ಎತ್ತರದ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮೀಣ ಪ್ರದೇಶದ ಹಾಗೂ ನಗರ ಪಟ್ಟಣ ಪ್ರದೇಶಗಳ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಲಸಿರಿ ಕಾಮಗಾರಿ : ಸಚಿವರ ಅಸಮಾಧಾನ
ಮಂಗಳೂರು ನಗರದಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿ ಅನುಷ್ಠಾನ ಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಉಸ್ತುವಾರಿ ಸಚಿವರು, ಪೈಪ್‍ಗಳನ್ನು ಅಳವಡಿಸಲು ಮುಖ್ಯ ರಸ್ತೆಗಳನ್ನು ಅಗೆದು, ದೀರ್ಘ ಕಾಲ ರಸ್ತೆಯನ್ನು ಯಥಾಸ್ಥಿತಿಗೆ ತಾರದೆ, ಸಂಚಾರ ವ್ಯವಸ್ಥೆಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಅಗೆದಿರುವ ರಸ್ತೆಗಳನ್ನು ಕೂಡಲೇ ಆದ್ಯತೆಯಲ್ಲಿ ಪುನಶ್ಚೇತನಗೊಳಿಸಬೇಕು ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಯು.ಐ.ಡಿ.ಎಫ್.ಸಿ. ಅಧಿಕಾರಿಗಳು, ರಸ್ತೆಯನ್ನು ಯಥಾಸ್ಥಿತಿಗೆ ತರಲು ಅಭಿಯಾನ ಮಾಡಿ ಕಾಮಗಾರಿ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಮೊದಲಾದವರು ಭಾಗವಹಿಸಿದ್ದರು.
ಸುಲ್ತಾನ್ ಬತ್ತೇರಿ : ನದಿ ಒತ್ತುವರಿ ಕೂಡಲೇ ತೆರವುಗೊಳಿಸಲು ಉಸ್ತುವಾರಿ ಸಚಿವರ ಸೂಚನೆ
ನಗರದ ಸುಲ್ತಾನ್ ಬತ್ತೇರಿ ಪರಿಸರದಲ್ಲಿ ನದಿ ತೀರಕ್ಕೆ ಕಟ್ಟಡ ತ್ಯಾಜ್ಯಗಳನ್ನು ಹಾಕಿ ನದಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಕೂಡಲೇ ತೆರವುಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ನಂದಿನಿ, ಫಲ್ಗುಣಿ ಮತ್ತು ಶಾಂಭವಿ ಕಲುಷಿತಗೊಳ್ಳುವುದನ್ನು ತಪ್ಪಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿದ ಅವರು, ಸುಲ್ತಾನ್ ಬತ್ತೇರಿಯಲ್ಲಿ ನದಿ ತೀರಕ್ಕೆ ಕಟ್ಟಡಗಳ ತ್ಯಾಜ್ಯಗಳನ್ನು ತಂದು ಸುರಿದು ಅಕ್ರಮವಾಗಿ ಒತ್ತುವರಿ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ನಿಟ್ಟಿನಲ್ಲಿ ತಕ್ಷಣವೇ ಕ್ರಮಕೈಗೊಂಡು ನದಿಯ ಮೂಲ ಜಾಗವನ್ನು ನದಿಗೆ ಸೇರುವಂತೆ ಮಾಡಿ, ನದಿ ವ್ಯಾಪ್ತಿಯನ್ನು ಮೂಲ ಸ್ವರೂಪಕ್ಕೆ ತರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭ ಮಾಹಿತಿ ನೀಡಿದ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಟ್ಟಡ ತ್ಯಾಜ್ಯ ಸುರಿದು ನದಿ ತೀರ ಅಕ್ರಮಿಸಿದವರ ವಿರುದ್ಧ ಈಗಾಗಲೇ ಪೆÇಲೀಸ್ ಕೇಸು ದಾಖಲಿಸಲಾಗಿದೆ ಎಂದರು. ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿ ಸಂಬಂಧಿಸಿದವರಿಗೆ ವರದಿ ನೀಡಲಾಗಿದೆ ಎಂದು ಪರಿಸರ ಮಂಡಳಿ ಹಾಗೂ ಸಿ.ಆರ್.ಝಡ್ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸುರತ್ಕಲ್ ಮುಕ್ಕ ನಂದಿನಿ ನದಿಯಲ್ಲಿ ಈಗಾಗಲೇ ಮಾಲಿನ್ಯ ನಿಯಂತ್ರಿಸಲಾಗಿದೆ. ಮಹಾನಗರಪಾಲಿಕೆ ತ್ಯಾಜ್ಯ ಶುದ್ಧೀಕರಣ ಘಟಕವನ್ನು ಮೇಲ್ದರ್ಜೆಗೇರಿಸಲಾಗಿದೆ. ಖಾಸಗಿ ಸಂಸ್ಥೆಗಳಿಂದ ಬರುವ ಕಲುಷಿತ ನೀರು ಕಡಿಮೆಯಾಗಿದೆ ಎಂದು ಮಾಲಿನ್ಯ ಮಂಡಳಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಬೈಕಂಪಾಡಿ ಕೈಗಾರಿಕಾ ಪ್ರದೇಶದ ತ್ಯಾಜ್ಯ ನೀರು ಕೂಳೂರು ನದಿಗೆ ಸೇರಿ ಮಾಲಿನ್ಯವಾಗುತ್ತಿರುವ ಸಾರ್ವಜನಿಕರ ದೂರಿನ ಕುರಿತು ಸಚಿವರು ಮಾಹಿತಿ ಕೇಳಿದರು. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನಿರ್ವಹಣೆಗೆÉ ಶುದ್ಧೀಕರಣ ಘಟಕ ನಿರ್ಮಿಸಲು 39 ಕೋಟಿ ರೂಪಾಯಿ ವೆಚ್ಚದ ಟೆಂಡರ್ ಆಗಿದೆ. ಇದಕ್ಕೆ ಜಮೀನು ಕೂಡ ಕಾದಿರಿಸಲಾಗಿದೆ ಎಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಬೈಕಂಪಾಡಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಅಂಗರಗುಂಡಿ ಮತ್ತು ಕುಡುಂಬೂರು ಜನವಸತಿ ಪ್ರದೇಶಗಳಲ್ಲಿ ಒಳಚರಂಡಿ (ಯುಜಿಡಿ) ಸೌಲಭ್ಯ ಒದಗಿಸಿ, ಅಲ್ಲಿನ ತ್ಯಾಜ್ಯವನ್ನು ಈಗಾಗಲೇ ತೋಕೂರು ಬಗ್ಗುಂಡಿ ಸಮೀಪ ನಿರ್ಮಿಸಿರುವ ಶುದ್ಧೀಕರಣ ಘಟಕಕ್ಕೆ ಸಂಪರ್ಕ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಮಾಲಿನ್ಯ ಮಂಡಳಿ ಅಧಿಕಾರಿಗಳು ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮೊದಲಾದವರು ಭಾಗವಹಿಸಿದ್ದರು.

























0 comments:
Post a Comment