ಬಂಟ್ವಾಳ, ಮೇ 30, 2026 (ಕರಾವಳಿ ಟೈಮ್ಸ್) : ಕೇಂದ್ರ ಸರ್ಕಾರವು ಪಂಚಾಯತ್ ರಾಜ್ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ನೀತಿ ಮತ್ತು ಇತರ ವೈಫಲ್ಯಗಳ ವಿರುದ್ಧ ದ ಕ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಬಿ ಸಿ ರೋಡಿನ ಮಿನಿ ವಿಧಾನಸೌಧದ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ ರೈ ಅವರು, ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದರು.
ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸರ್ವ ಶಿಕ್ಷಣ ಅಭಿಯಾನ, ಗ್ರಾಮೀಣ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ದುರ್ಬಲ ವರ್ಗಗಳ ಸಬಲೀಕರಣಕ್ಕೆ ನೆರವಾಗಿದೆ. ಆದರೆ ಬಿಜೆಪಿ ಸುಳ್ಳು ಪ್ರಚಾರವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನಪರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೇ ಸುಮಾರು 5 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ರಮಾನಾಥ ರೈ ಹೇಳಿದರು.
ಸುಧೀರ್ ಕುಮಾರ್ ಮರೋಳಿ ಮುಖ್ಯ ಭಾಷಣಗೈದರು. ಪ್ರಮುಖರಾದ ಎಂ ಎಸ್ ಮಹಮ್ಮದ್, ಮಮತಾ ಡಿ ಎಸ್ ಗಟ್ಟಿ, ಶಾಲೆಟ್ ಪಿಂಟೋ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಅಶ್ವನಿ ಕುಮಾರ್ ರೈ, ಬಿ ಪದ್ಮಶೇಖರ್ ಜೈನ್, ಇಬ್ರಾಹಿಂ ನವಾಝ್, ಕೆ ಪದ್ಮನಾಭ ರೈ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಜಗದೀಶ್ ಕೊಯಿಲ ಸ್ವಾಗತಿಸಿ, ಸುಭಾಶ್ಚಂದ್ರ ಶೆಟ್ಟಿ ಪ್ರಸ್ತಾವನೆಗೈದರು. ವೃಂದಾ ಪೂಜಾರಿ ವಂದಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗೆ ಸಂಬಂಧಿಸಿದ ಬೇಡಿಕೆಗಳ ಕುರಿತು ತಹಶೀಲ್ದಾರ್ ಮುಖಾಂತರ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಲಾಯಿತು.























0 comments:
Post a Comment