ಮಂಗಳೂರು, ಮೇ 26, 2026 (ಕರಾವಳಿ ಟೈಮ್ಸ್) : ಜೂನ್ 28 ರಿಂದ ಜುಲೈ 1 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಲಿರುವುದರಿಂದ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೇ 26 ರಂದು ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮನೆಯಲ್ಲಿರುವ ನವಜಾತ ಶಿಶುಗಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ತಾಯಂದಿರ ಸಭೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅರಿವು ಮೂಡಿಸಬೇಕು ಎಂದರು.
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಲಸಿಕಾ ದಿನ ಮತ್ತು ಸ್ಥಳಗಳ ಮಾಹಿತಿಯನ್ನು ಪ್ರಚಾರ ಮಾಡಬೇಕು. ಎಲ್ಲಾ ಶಾಲೆಗಳು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಪೋಲಿಯೋ ದಿನದ ಮುಂಚಿತವಾಗಿ ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು, ಹಾಗೂ ಇತರೇ ವಲಸೆ ಪ್ರದೇಶಗಳಲ್ಲಿ 0-5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ, ಆದ್ಯತೆ ನೀಡಿ ಲಸಿಕೆ ಹಾಕಿಸುವಂತೆ ಕ್ರಮವಹಿಸಬೇಕು ಎಂದವರು ಹೇಳಿದರು.
ಕಾರ್ಯಕ್ರಮದ ಮೊದಲನೇ ದಿನ ಪೋಲಿಯೋ ಬೂತ್ ಗಳಲ್ಲಿ ಹಾಗೂ 2 ದಿನ ಗ್ರಾಮಾಂತರ ಮತ್ತು 3 ದಿನ ನಗರ ಪ್ರದೇಶಗಳಲ್ಲಿ ಮನೆ ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವಂತೆ ವ್ಯವಸ್ಥೆ ಮಾಡಲಾಗಿದೆ. ಈ ವರ್ಷ 1,40,247 ಮಕ್ಕಳಿಗೆ ಲಸಿಕೆ ನೀಡಲು ಗುರಿ ನಿಗದಿಪಡಿಸಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಕುಲಾಲ್, ಎಸ್.ಎಂ.ಒ ಡಾ. ಹರ್ಷಿತ್, ಮೆಡಿಕಲ್ ಕಾಲೇಜು ಹಾಗೂ ನರ್ಸಿಂಗ್ ಕಾಲೇಜು ಮುಖ್ಯಸ್ಥರು, ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.













0 comments:
Post a Comment