ಬೆಂಗಳೂರು, ಜೂನ್ 25, 2026 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೂತನ ಸಚಿವರಿಗೆ ಮಳೆಗಾಲದ ತುರ್ತು ಪರಿಸ್ಥಿತಿ ಹಾಗೂ ಪ್ರವಾಹ ನಿರ್ವಹಣೆಗಾಗಿ ಜಿಲ್ಲಾಡಳತಗಳೊಂದಿಗೆ ಸಮನ್ಯತೆ ಸಾಧಿಸುವ ಉದ್ದೇಶದಿಂದ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿ ಆದೇಶಿಸಿದ್ದಾರೆ. ರಾಜ್ಯ ಆರೋಗ್ಯ ಸಚಿವ ಡಾ ಯು ಟಿ ಖಾದರ್ ಫರೀದ್ ಅವರಿಗೆ ಅವಿಭಜಿತ ದಕ್ಷಿಣ ಕನ್ನಡ ಸಹಿತ ಒಟ್ಟು ನಾಲ್ಕು ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.
ರಾಜ್ಯದ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಹಾಗೂ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತು ಪ್ರಮುಖವಾಗಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಮುಖ್ಯಮಂತ್ರಿಗಳು ಸಚಿವರಿಗೆ ವಿವಿಧ ಜಿಲ್ಲೆಗಳ ತುರ್ತು ಪ್ರಕೃತಿ ವಿಕೋಪ ಮೇಲುಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಆದೇಶಿಸಿದ್ದಾರೆ.
ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಹಾಗೂ ಯುವ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಮುಖ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಈ ಉಸ್ತುವಾರಿ ಹಂಚಿಕೆಯು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ ಉಸ್ತುವಾರಿ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.
ಡಿಸಿಎಂ ಡಾ. ಜಿ. ಪರಮೇಶ್ವರ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಸಚಿವ ಕೃಷ್ಣ ಭೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು,. ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಡಾ. ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಮತ್ತು ಚಾಮರಾಜನಗರ, ಡಾ ಯು.ಟಿ. ಖಾದರ್ ಫರೀದ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜೊತೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ. ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ, ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.
ಸಚಿವ ಸತೀಶ್ ಜಾರಕಿಹೊಳಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಕೆ.ಜೆ. ಜಾರ್ಜ್ ಅವರಿಗೆ ಚಿಕ್ಕಮಗಳೂರು ಮತ್ತು ದಾವಣಗೆರೆ, ಈಶ್ವರ ಖಂಡ್ರೆಗೆ ಬೀದರ್ ಮತ್ತು ಗದಗ, ಭೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಿ ಸಿಎಂ ಆದೇಶಿಸಿದ್ದಾರೆ.















0 comments:
Post a Comment