ಮಂಗಳೂರು, ಜುಲೈ 16, 2026 (ಕರಾವಳಿ ಟೈಮ್ಸ್) : “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೆÇಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು, ಇಂದಬೆಟ್ಟು ಗ್ರಾಮದ ಬಂಗಾಡಿ ಅಮೀಷಾ ಮಂಝಿಲ್ ನಿವಾಸಿ ಉಮ್ಮರ್ ಫಾರೂಕ್ ಎಂಬವರ ಪುತ್ರ ಮೊಹಮ್ಮದ್ ಅಲ್ಫಾಜ್ (28) ಹಾಗೂ ಲಾಯಿಲಾ ಗ್ರಾಮದ ಉಜಿರೆ ಹಳೆಪೇಟೆ ವಿವೇಕಾನಂದ ನಗರ ನಿವಾಸಿ ಮೊಹಮ್ಮದ್ ಹನೀಫ್ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಫಾ (28) ಎಂದು ಗುರುತಿಸಲಾಗಿದೆ.
ಜೂನ್ 26 ರಂದು ಸುರತ್ಕಲ್ ಪೆÇಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ 1.50 ಲಕ್ಷ ರೂಪಯಿ ಮೌಲ್ಯದ 15.17 ಗ್ರಾಂ ಮಾದಕ ವಸ್ತು ಎಂಡಿಎಂಎ ಸ್ವಾಧೀನಪಡಿಸಿಕೊಂಡು ಆತನ ವಿರುದ್ಧ ಮಂಗಳೂರು ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದರು.
ಈ ಪ್ರಕರಣದಲ್ಲಿ ಆರೋಪಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡಿರುವ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಮುಂದುವರಿಸಿ, ಡ್ರಗ್ ಪೆಡ್ಲರ್ ಗಳ ಮಾಹಿತಿ ಸಂಗ್ರಹಿಸಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ವ್ಯಕ್ತಿಯು ದೆಹಲಿಯಿಂದ ಮಾದಕ ವಸ್ತು ಖರೀದಿಸಿ ಬೆಂಗಳೂರಿಗೆ ಹೋಗುತ್ತಿರುವಾಗ ಖಚಿತ ಮಾಹಿತಿ ಪಡೆದ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಎಂಬಲ್ಲಿಗೆ ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 5.20 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್ ಮತ್ತು ಮೊಬೈಲ್ ಫೆÇೀನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಮೊಹಮ್ಮದ್ ಅಲ್ಫಾಜ್ ಎಂಬಾತನ ವಿರುದ್ದ ಈ ಹಿಂದೆ 2024ರಲ್ಲಿ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಹಾಗೂ 2026ರಲ್ಲಿ ಉರ್ವ ಪೆÇಲೀಸ್ ಠಾಣೆಯಲ್ಲಿ ಮಾದಕ ವಸ್ತು ಎಮ್.ಡಿ.ಎಂ.ಎ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿವೆ.
ಆರೋಪಿತರು ಕಾರಿನ ಮೂಲಕ ದೆಹಲಿಯಿಂದ ಮಾದಕ ವಸ್ತು ಖರೀದಿಸಿಕೊಂಡು, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದ ಇತರೆ ಕಡೆಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಈ ಮಾದಕ ವಸ್ತು ಎಂಡಿಎಂಎ ಮಾರಾಟ/ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.
















0 comments:
Post a Comment