ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಅನ್ನಛತ್ರ ಹಾಗೂ ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ - Karavali Times ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಅನ್ನಛತ್ರ ಹಾಗೂ ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ - Karavali Times

728x90

4 July 2026

ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಅನ್ನಛತ್ರ ಹಾಗೂ ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಬಂಟ್ವಾಳ, ಜುಲೈ 04, 2026 (ಕರಾವಳಿ ಟೈಮ್ಸ್) : ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅನ್ನಛತ್ರ ಹಾಗೂ ನೂತನ ಸಭಾಂಗಣ ನಿರ್ಮಾಣ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಅನ್ನಛತ್ರ ಮತ್ತು ಸಭಾಂಗಣ ನಿರ್ಮಾಣ ಕಾಮಗಾರಿಗಳ ಪ್ರಸ್ತುತ ಹಂತ, ತಾಂತ್ರಿಕ ಅಂಶಗಳು, ಅಗತ್ಯ ಮೂಲಸೌಕರ್ಯ, ಕಾಮಗಾರಿಯ ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಅಧಿಕಾರಿಗಳು ಮತ್ತು ಇಂಜಿನಿಯರುಗಳೊಂದಿಗೆ ಸಮಗ್ರ ಚರ್ಚೆ ನಡೆಯಿತು.

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ರಾಜ್ಯದ ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾಗಿದ್ದು, ವರ್ಷಪೂರ್ತಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಭಕ್ತಾದಿಗಳಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಅನ್ನಛತ್ರ ಹಾಗೂ ಸಭಾಂಗಣವು ಅತ್ಯಂತ ಉಪಯುಕ್ತ ಯೋಜನೆಯಾಗಿದ್ದು, ಕಾಮಗಾರಿಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಹಾಗೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನ್ನದಾಸೋಹ ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿರುವ ಈ ಯೋಜನೆಯು ಭಕ್ತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಕಾಮಗಾರಿಯ ಪ್ರತಿಯೊಂದು ಹಂತವನ್ನು ನಿಯಮಿತವಾಗಿ ಪರಿಶೀಲಿಸಿ, ಅಗತ್ಯವಿರುವ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಇಂಜಿನಿಯರುಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ ಮಂಜಯ್ಯ ಶೆಟ್ಟಿ, ಮೊಕ್ತೇಸರ ಮಾಧವ ಭಟ್, ಕಾರ್ಯನಿರ್ವಹಣಾಧಿಕಾರಿ ಕೆ ಪಿ ಚಂದ್ರ ಮೋಹನ್, ಇಂಜಿನಿಯರುಗಳಾದ ಲಕ್ಷ್ಮಣ್ ಪೂಜಾರಿ ಹಾಗೂ ಸುಪ್ರೀತ್ ಆಳ್ವ ಉಪಸ್ಥಿತರಿದ್ದು, ಕಾಮಗಾರಿಯ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಭೆಗೆ ವಿವರಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಪೊಳಲಿ ರಾಜರಾಜೇಶ್ವರಿ ದೇವಸ್ಥಾನ ಅನ್ನಛತ್ರ ಹಾಗೂ ಸಭಾಂಗಣದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ Rating: 5 Reviewed By: karavali Times
Scroll to Top