ಬಂಟ್ವಾಳ, ಆಗಸ್ಟ್ 27, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್ 19ರ ಶನಿವಾರದಂದು ರಾಜ್ಯಾದಂತ್ಯ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಮದ್ಯಾಹ್ನ 2 ಗಂಟೆಯಿಂದ 5.30 ರ ತನಕ ಆಯೋಜಿಸಲಾಗಿದ್ದು, ಬಾಕಿ ಇರುವ ಪ್ರಕರಣಗಳು ಹಾಗೂ ದಾವಾ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಲೋಕ ಅದಾಲತ್ತಿನಲ್ಲಿ ನ್ಯಾಯಾಲಯಗಳಲ್ಲಿ ಸಾರ್ವಜನಿಕರು ಬಾಕಿ ಇರುವ ಪ್ರಕರಣಗಳು ಹಾಗೂ ದಾವಾ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಆಸಕ್ತಿ ಹೊಂದಿರುವವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳವಂತೆ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ, ರಾಜಿಗೆ ಅವಕಾಶವಿರುವ ಪ್ರಕರಣಗಳನ್ನು ಸಂಬಂಧಪಟ್ಟ ನ್ಯಾಯಾಲಯದ ಮೂಲಕ ಲೋಕ ಅದಾಲತ್ತಿಗೆ ತರಬಹುದಾಗಿದೆ. ಅದೇ ರೀತಿ ವ್ಯಾಜ್ಯಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ಸಂಬಂಧಪಟ್ಟ ಕಾನೂನು ಸೇವೆಗಳ ಸಮಿತಿಯ ಮೂಲಕ ರಾಜಿ ಮಾಡಿಕೊಳ್ಳಲು ಅವಕಾಶವಿದೆ. ಲೋಕ ಅದಾಲತ್ತಿನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವಂತೆ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್ ಸೈಟ್ ಅಥವಾ 15100 ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಲು ಕ್ಯೂ ಆರ್ ಕೋಡ್ ಮೂಲಕ ಚಂದದಾರರಾಗಬೇಕೆಂದು ಇದೇ ವೇಳೆ ಅವರು ಮನವಿ ಮಾಡಿದ್ದಾರೆ.
ಅಕ್ಟೋಬರ್ ತಿಂಗಳಿನಿಂದ ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0-ವಿಶೇಷ ಮಧ್ಯಸ್ಥಿಕೆ ಅಭಿಯಾನ’ ಎರಡೂ ಪಕ್ಷಗಾರರು ಅವಕಾಶ ಸದುಪಯೋಗ ಪಡಿಸಿಕೊಳ್ಳುವ ಅವಕಾಶ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 1 ರಿಂದ ಡಿಸೆಂಬರ್ 30ರ ವರೆಗೆ ‘ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0-ವಿಶೇಷ ಮಧ್ಯಸ್ಥಿಕೆ ಅಭಿಯಾನ’ ಎಂಬ 90 ದಿನಗಳ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ ಸಪ್ಟೆಂಬರ್ 30ರ ವರೆಗೆ ವಿಶೇಷ ಮಧ್ಯಸ್ಥಿಕೆ ಅಭಿಯಾನಕ್ಕೆ ಒಳಪಡಬಹುದಾದ ಪ್ರಕರಣಗಳನ್ನು ಗುರುತಿಸುವಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಅಕ್ಟೊಬರ್ ತಿಂಗಳಿನಿಂದ ಡಿಸೆಂಬರ್ ಅಂತ್ಯದವರೆಗೆ ಈ ವಿಶೇಷ ಅಭಿಯಾನ ನಡೆಯಲಿದೆ. ಪ್ರಕರಣಗಳ ಇತ್ಯರ್ಥದಲ್ಲಿ ಸಂಬಂಧಿಸಿದ ಎರಡೂ ಪಕ್ಷಗಾರರು ಹಾಜರಾಗಿ, ಮಧ್ಯಸ್ಥಿಕೆ ನಡೆಸುವ ವಕೀಲರಿಗೆ ಸಹಕರಿಸುವ ಮೂಲಕ ತಮ್ಮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೂಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳವಂತೆ ಸಾರ್ವಜನಿಕರಿಗೆ ತಾಲೂಕು ಕಾನೂನು ಸೇವೆಗಳ ಸಮಿತಿ ಮನವಿ ಮಾಡಿದೆ. ಅಭಿಯಾನದ ಕುರಿತು ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.






















0 comments:
Post a Comment