ಪುತ್ತೂರು, ಆಗಸ್ಟ್ 26, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19 ರಿಂದ 20ರ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣ ಬೇಧಿಸಿದ ಪುತ್ತೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳ ರಾಜ್ಯದ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡು ಕರೂರು ನಿವಾಸಿ ಶಕ್ತಿವೇಲು ಜಿ (24) ಎಂದು ಗುರುತಿಸಲಾಗಿದೆ.
ಪುತ್ತೂರು ಉಪವಿಭಾಗದ ಎಎಸ್ಪಿ ಪ್ರಮೋದ್ ಕುಮಾರ್ ಅವರ ಹಾಗೂ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪ್ರಭಾರ ಪೆÇಲೀಸ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈಗಳಾದ ಗುಣಪಾಲ ಜೆ ಮತ್ತು ಸುಷ್ಮಾ ಜಿ ಭಂಡಾರಿ ಅವರ ನೇತೃತ್ವದ ತನಿಖಾ ತಂಡವು ಪ್ರಕರಣದ ಪತ್ತೆಗಾಗಿ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ, ಅಂತರ್ ರಾಜ್ಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಸಫಲರಾಗಿದ್ದಾರೆ.
ಆರೋಪಿಗಳಿಂದ ಕಳ್ಳತನ ಮಾಡಿದ 2.5 ಲಕ್ಷ ರೂಪಾಯಿ ಮೌಲ್ಯದ ಓಮ್ನಿ ಕಾರು ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ 1 ಲಕ್ಷ ರೂಪಾಯಿ ಮೌಲ್ಯದ ಕೆಟಿಎಂ ಬೈಕ್ ಸ್ವಾಧೀನಪಡಿಸಿಕೊಂಡಿದ್ದು, ವಿಚಾರಣೆಯ ವೇಳೆ ಸದ್ರಿ ಆರೋಪಿಗಳು ಓಮ್ನಿ ಕಾರನ್ನು ಕದ್ದು, ಕೇರಳ ರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಕೇರಳದಿಂದ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾಡಿ, ತಮಿಳುನಾಡಿನಲ್ಲಿ ಸದ್ರಿ ವಾಹನವನ್ನು ಆಂಬ್ಯುಲೆನ್ಸ್ ಆಗಿ ಪರಿವರ್ತಿಸಿರುವುದು ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳ ವಿರುದ್ದ ಕೇರಳದ ಬದಿಯಡ್ಕ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


























0 comments:
Post a Comment