ಕೆಲಿಂಜದಲ್ಲಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ವಿಟ್ಲ ಹೋಬಳಿಯ ಜನಾಂದೋಲನ ಸಭೆ - Karavali Times ಕೆಲಿಂಜದಲ್ಲಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ವಿಟ್ಲ ಹೋಬಳಿಯ ಜನಾಂದೋಲನ ಸಭೆ - Karavali Times

728x90

19 September 2026

ಕೆಲಿಂಜದಲ್ಲಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ವಿಟ್ಲ ಹೋಬಳಿಯ ಜನಾಂದೋಲನ ಸಭೆ

ಬಂಟ್ವಾಳ, ಸೆಪ್ಟೆಂಬರ್ 20, 2026 (ಕರಾವಳಿ ಟೈಮ್ಸ್) : ವಿಟ್ಲ ಹೋಬಳಿ ಮಟ್ಟದ ಜನಾಂದೋಲನ ಸಭೆ ಕೆಲಿಂಜ ಶ್ರೀ ನಿಕೇತನ  ಮಂದಿರದಲ್ಲಿ ಸೆ 19 ರಂದು ನಡೆಯಿತು. ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಉದ್ಘಾಟಿಸಿದರು.

ಸಭೆಯಲ್ಲಿ ವಿವಿಧ ಗ್ರಾಮಗಳ ಸಾರ್ವಜನಿಕರಿಂದ ಕಂದಾಯ, ರಸ್ತೆ, ಸಾರಿಗೆ, ಪಡಿತರ ಚೀಟಿ ಸೇರಿದಂತೆ ವಿವಿಧ ಮೂಲ ಸೌಕರ್ಯ ಹಾಗೂ ವೈಯಕ್ತಿಕ ಸಮಸ್ಯೆಗಳಿಗೆ ಸಂಬಂಧಿಸಿದ 68ಕ್ಕೂ ಅಧಿಕ ಅರ್ಜಿಗಳು ಸ್ವೀಕರಿಸಲಾಯಿತು. ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದವು.

ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಇಂತಹ ಜನಾಂದೋಲನ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಮನವಿಯನ್ನೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು, ನಿಯಮಾನುಸಾರ ಸಾಧ್ಯವಿರುವ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 

ಕಂದಾಯ, ರಸ್ತೆ, ಕುಡಿಯುವ ನೀರು, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳೀಯವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ನೀಡಿರುವ ಮನವಿಗಳಿಗೆ ವಿಳಂಬವಾಗದಂತೆ ಸ್ಪಂದಿಸುವ ಅಗತ್ಯವಿದೆ ಎಂದವರು ಅಧಿಕಾರಿಗಳಿಗೆ ಸೂಚಿಸಿದರು.

ವಿಟ್ಲ ಭಾಗದ ಜನರ ಬಹುಕಾಲದ ಬೇಡಿಕೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಅಗತ್ಯ ಗಮನ ಸೆಳೆಯುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. 

ವಿಟ್ಲ ತಾಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಹೋರಾಟ ಸಮಿತಿ ವತಿಯಿಂದ ವಿಟ್ಲವನ್ನು ಪ್ರತ್ಯೇಕ ತಾಲೂಕಾಗಿ ರಚಿಸುವಂತೆ ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು.

ಸಮಿತಿ ಪರವಾಗಿ ಕಾನ ಈಶ್ವರ ಭಟ್ ಅವರು ಎರಡು ಪ್ರತ್ಯೇಕ ಮನವಿಗಳನ್ನು ಶಾಸಕರಿಗೆ ನೀಡಿದರು. ಇದೇ ವೇಳೆ ಪಹಣಿ, ಜಮೀನು ಅಳತೆ ಸೇರಿದಂತೆ ವಿವಿಧ ಕಂದಾಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ರೇಷನ್ ಕಾರ್ಡ್ ಸೇರಿದಂತೆ ಹಲವು ಅರ್ಜಿಗಳೂ ಸಭೆಯಲ್ಲಿ ಸ್ವೀಕರಿಸಲ್ಪಟ್ಟವು.

ಸೆಕೀನಾ ಕಂಪದಬೈಲು ವೀಕಂಭ ಪ್ರದೇಶದಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಪಿಡಬ್ಲ್ಯುಡಿ ರಸ್ತೆಯ ಬದಿಯಲ್ಲಿ ತಡೆಗೋಡೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು. 

ಸಜಿಪಮೂಡ ಗ್ರಾಮದ ಮಿತ್ತಕೋಡಿ ವಸತಿ ಪ್ರದೇಶದಲ್ಲಿ ಹಂದಿ ಸಾಕಾಣಿಕೆಯಿಂದ ಉಂಟಾಗುತ್ತಿರುವ ತ್ಯಾಜ್ಯ ನೀರನ್ನು ಸಮರ್ಪಕ ವ್ಯವಸ್ಥೆ ಇಲ್ಲದೆ ಹೊರಬಿಡಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಆರೋಗ್ಯದ ಸಮಸ್ಯೆ ಉಂಟಾಗುವ ಆತಂಕವಿದೆ ಎಂದು ಸಾರ್ವಜನಿಕರು ದೂರಿದರು. ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದರು.

ವಿಟ್ಲದಿಂದ ಮಂಗಳೂರಿಗೆ ಸಂಚರಿಸುವ ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ವೇದಾವತಿ ಅವರು ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೋರಿದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ತಹಶೀಲ್ದಾರ್ ಮಂಜುನಾಥ್ ಸಭೆಯಲ್ಲಿ ಭಾಗವಹಿಸಿದ್ದರು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಕೆಲಿಂಜದಲ್ಲಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ವಿಟ್ಲ ಹೋಬಳಿಯ ಜನಾಂದೋಲನ ಸಭೆ Rating: 5 Reviewed By: karavali Times
Scroll to Top