ಬಂಟ್ವಾಳ, ಸೆಪ್ಟೆಂಬರ್ 03, 2026 (ಕರಾವಳಿ ಟೈಮ್ಸ್) : ರಾಜ್ಯ ಸರಕಾರ ಜನರ ಬಳಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತೆರಳಿ ಸಮಸ್ಯೆ ಆಲಿಸುವ ಹಿನ್ನಲೆಯಲ್ಲಿ ಹೊಸ ಇಲಾಖೆ ಸ್ಥಾಪಿಸಿ “ಪ್ರಜಾಸೇವೆ” ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 5 ರಂದು ಇದು ರಾಜ್ಯಾದ್ಯಂತ ಆರಂಭವಾಗಲಿದ್ದು, ಈ ಪ್ರಯುಕ್ತ ಸೆ 5 ರಂದು ಶನಿವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸರ್ವಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರ್ ಜಿ ಮಂಜುನಾಥ ತಿಳಿಸಿದ್ದಾರೆ.
ಗುರುವಾರ ಸಂಜೆ ತಾಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ನಿರ್ದೇಶನದಂತೆ ಈ ಪ್ರಜಾಸೇವೆ ತಿಂಗಳ ಪ್ರತೀ ಶನಿವಾರ ಆಂದೋಲನ ಸಭೆ ರೂಪದಲ್ಲಿ ನಡೆಯಲಿದೆ. ಗ್ರಾಮ ಮಟ್ಟ, ಹೋಬಳಿ ಮಟ್ಟದಲ್ಲಿ ನಡೆಸಲಾಗುವ ಈ ಸಭೆಗೆ ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.
ಸೆ 5 ರಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಸಭೆ ನಡೆಯಲಿದ್ದು, ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಯಾವುದೇ ಸಮಸ್ಯೆಗಳ ಬಗ್ಗೆ ಅರ್ಜಿ ಸಲ್ಲಿಸಬಹುದು. ತಾಲೂಕಿನ ಎಲ್ಲ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಲಘು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬಹುದು. ಜಟಿಲ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಮುಂದಿನ ದಿನಗಳಲ್ಲಿ ಪರಿಶೀಲಿಸಿ ಪರಿಹಾರ ಒದಗಿಸಲಿದ್ದಾರೆ ಎಂದ ತಹಶೀಲ್ದಾರರು ಮುಂದಿನ ಸಭೆಗಳ ಬಗ್ಗೆ ಬಳಿಕ ಮಾಹಿತಿ ನೀಡಲಾಗುವುದು ಎಂದರು.











0 comments:
Post a Comment