ಮಂಗಳೂರು, ಸೆಪ್ಟೆಂಬರ್ 05, 2026 (ಕರಾವಳಿ ಟೈಮ್ಸ್) : ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿದ ಪ್ರಕರಣ ಹಾಗೂ ಕೋಳಿ ತ್ಯಾಜ್ಯವನ್ನು ರಸ್ತೆ ಬದಿಯ ಚರಂಡಿಗೆ ಬಿಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಮ್ಯಾ ಅವರು ಕ್ರಮವಾಗಿ ಎರಡೂವರೆ ಸಾವಿರ ರೂಪಾಯಿ ಹಾಗೂ ಐದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಸೆ 5 ರಂದು ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಮಾಲೋಚಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಪಂಚಾಯತ್ ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ತೆರಳಿ ಖುದ್ದಾಗಿ ಪರಿಶೀಲನೆ ನಡೆಸಲಾಯಿತು. ಪರಿಶೀಲನೆಯ ವೇಳೆ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ, ತಕ್ಷಣವೇ ಸಂಬಂಧಪಟ್ಟವರ ವಿರುದ್ಧ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬದಿ ಹಾಗೂ ಚರಂಡಿಗಳಿಗೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯದೆ, ತ್ಯಾಜ್ಯವನ್ನು ನಿಗದಿತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.











0 comments:
Post a Comment