ಬಂಟ್ವಾಳ, ನವಂಬರ್ 21, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣಾ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 54 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪಿತ್ತಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಅನಿಲ್ ಎಂದು ಹೆಸರಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದ ಮಹಿಳೆಯೋರ್ವರಿಗೆ, ಆಕೆಯ ನೆರೆಮನೆ ನಿವಾಸಿಯಾಗಿದ್ದ ಅನಿಲ್ ಎಂಬಾತ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವಬೆದರಿಕೆ ಒಡ್ಡಿದ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಅಂದಿನ ಪಿಎಸ್ಸೈ ಪ್ರಸನ್ನ ಎಂ ಎಸ್ ಅವರು ಆರೋಪಿಯನ್ನು ಪತ್ತೆ ಹಚ್ಚಿದ್ದರು. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಅಂದಿನ ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ಟಿ ಡಿ ನಾಗರಾಜ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಬಗ್ಗೆ ವಿಚಾರಣೆ ನಡೆಸಿ ಆರೋಪಿ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 54 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ವಾದ ಮಂಡಿಸಿದ್ದಾರೆ.












0 comments:
Post a Comment